
ಉಡುಪಿ: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಅಚರಣೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚಿಸಿದ್ದಾರೆ.
ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50ವರ್ಷ ಪೂಣಗೊಂಡಿದ್ದು, ಈ ಸುಸಂದರ್ಭವನ್ನು ವಿಶೇಷವಾಗಿ ಆಚರಿಸಲು ಚಿಂತನೆ ನಡೆಸಿದ ಜಿಲ್ಲಾಡಳಿತ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿ ಬಿಡಿಸುವುದರ ಜೊತೆಗೆ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷ ವಾಕ್ಯವನ್ನು ಬರೆಯಬೇಕು ಎಂದು ತಿಳಿಸಿದ್ದಾರೆ.
ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಬೇಕು. ಸಂಜೆ 7 ಗಂಟೆಗೆ ಎಲ್ಲಾ ಗ್ರಾಮಗಳ ಮನೆ, ಕಛೇರಿ ಹಾಗೂ ಅಂಗಡಿ ಮಳಿಗೆಗಳ ಮುಂದೆ ದೀಪ ಹಚ್ಚುವ ಮೂಲಕ ಕನ್ನಡ ಜ್ಯೋತಿಯನ್ನು ಬೆಳಗಿಸಬೇಕು.
ಇನ್ನು, ರಾಜ್ಯ ಸರ್ಕಾರ ಕೂಡ ಈ ಬಗ್ಗೆ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮತ್ತುಗ್ರಾಮ ಪಂಚಾಯತ್ ಮಟ್ಟದಲ್ಲಿ ನವೆಂಬರ್ 1ರಂದು ಧ್ವಜಾರೋಹಣ, ರಾಷ್ಟ್ರಗೀತೆ , ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಎಲ್ಲಾದರೂ ಇರು ಎಂತಾದರೂ ಇರು, ಒಂದೇ ಒಂದೇ ಕರ್ನಾಟಕ ಒಂದೆ, ಹೊತ್ತಿತೋ ಹೊತ್ತಿತು ಕನ್ನಡ ದೀಪ ಮತ್ತು ಹೆಸರಾಯಿತು ಕರ್ನಾಟಕ ಉಸಿರಾಗಲಿ ಕ್ನನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವಂತೆ ಸೂಚಿಸಿದೆ.
