
ಬೆಂಗಳೂರು: ಹಾವೇರಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ, ಮೃತರ ಕುಟುಂಬಸ್ಥರಿಗೆ ತಲಾ 2ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹಾವೇರಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ತಮ್ಮವರನ್ನು ಕಳೆದುಕೊಂಡಿರುವ ದುಃಖತಪ್ತ ಕುಟುಂಬಕ್ಕೆ ಸಂತಾಪಗಳು ಎಂದು ಹೇಳಿದ್ದಾರೆ.
ಮೊದಲಿಗೆ ಸಂತಾಪವನ್ನಷ್ಟೇ ಸೂಚಿಸಿದ್ದ ಸಿಎಂ ಸಿದ್ದರಾಮಯ್ಯ ಬಳಿಕ ಪರಿಹಾರ ಘೋಷಣೆ ಮಾಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಮೃತದೇಹವನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಘೋಷಿಸದೇ ಮೃತದೇಹವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು ಪರಿಹಾರ ಘೋಷಣೆ ಮಾಡಿದ್ದಾರೆ.
ಇನ್ನು, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ವೈಯಕ್ತಿಕವಾಗಿ ಮೃತರ ಕುಟುಂಬಕ್ಕೆ ತಲಾ 50ಸಾವಿರ ಪರಿಹಾರ ನೀಡಿದ್ದಾರೆ.
