
ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಕೆಲವೆಡೆ ನೆರೆ ಉಂಟಾಗಿದೆ. ಇನ್ನೂ ಕೆಲೆವೆಡೆ ಅಂಗಡಿ, ಮನೆಗಳಿಗೆ ನೀರು ನುಗ್ಗಿದೆ. ಶಾಲಾ-ಕಾಲೇಜುಗಳಿಗೂ ಕೂಡ ರಜೆ ನೀಡಲಾಗುತ್ತಿದೆ. ಮಳೆ ಮುಂದುವರಿದಿರುವ ಹಿನ್ನೆಲೆ ಇಂದೂ ಕೂಡ ಉಡುಪಿ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಮಂಗಳವಾರ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇನ್ನು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮ, ಇಂಜಿನಿಯರಿಂಗ್, ಐ.ಟಿ.ಐ ಕಾಲೇಜುಗಳಿಗೆ ರಜೆ ನೀಡಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸ್ಪಷ್ಟನೆ ನೀಡಿದ್ದಾರೆ.
ಇನ್ನು, ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಶಾಲಾ-ಕಾಲೇಜುಗಳಿಗೂ ಕೂಡ ರಜೆ ಘೋಷಣೆ ಮಾಡಲಾಗಿದೆ.
