ಉಡುಪಿ/ಮಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಂತೂ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಆರ್ಭಟಕ್ಕೆ ಜನತೆ ತತ್ತರಿಸಿ ಹೋಗಿದ್ದಾರೆ. ಹಲವೆಡೆ ಅಪಾರ ಹಾನಿ ಉಂಟಾಗಿದ್ದು, ಮರಗಳು ಧರೆಗುರುಳಿವೆ, ಮನೆ, ಅಂಗಡಿಗಳಿಗೆ ನೀರು ನುಗ್ಗಿದ್ದು, ಶಾಲಾ-ಕಾಲೇಜಿಗೂ ಕೂಡ ರಜೆ ಘೋಷಿಸಲಾಗಿದೆ.
ಇನ್ನೂ ಒಂದು ವಾರಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ವೇಳೆ ಮೀನುಗಾರರಿಗೆ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಇನ್ನು, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ. ಮಣ್ಣಿನಡಿಯಲ್ಲಿ 15 ಮಂದಿ ಸಿಲುಕಿರುವ ಶಂಕೆ ಇದ್ದು, ಓರ್ವ ಮಹಿಳೆಯ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಇನ್ನುಳಿದವರ ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣಾ ತಂಡ ನಿರತವಾಗಿದೆ.
