
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಏಳು ಮಂದಿ ಸಾವನ್ನಪ್ಪಿರುವ ಮಂಗಳವಾರ ಘಟನೆ ನಡೆದಿದೆ.
ಈ ಕುರಿತು ಮಾಹಿತಿ ನೀಡಿರುವ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದು ಗುಡ್ಡ ಕುಸಿತದಿಂದ ಏಳು ಮಂದಿ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಈಗಾಗಲೇ ರಕ್ಷಣಾ ತಂಡ ಓರ್ವ ಮಹಿಳೆಯ ಮೃತದೇಹವನ್ನು ಹೊರತೆಗೆದಿದ್ದು, ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎನ್ನಲಾಗಿದೆ.
ಗುಡ್ಡ ಕುಸಿತದಿಂದಾಗಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಕಾರವಾರ, ಗೋವಾ, ಅಂಕೋಲಾದಿಂದ ಕೇರಳ, ಮಂಗಳೂರು, ಕುಮಟಾ ಮತ್ತಿತರ ಭಾಗಗಳಿಗೆ ಹೋಗುವವರಿಗೆ ಈಗ ಸಂಕಷ್ಟ ಎದುರಾಗಿದೆ.
