
ಬೆಂಗಳೂರು: ಮುಡಾ ಹಗರಣದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದ್ದು, ಸಿಎಂ ಅರ್ಜಿಯನ್ನು ವಜಾಗೊಳಿಸಿದೆ.
ಈ ವಿಚಾರವಾಗಿ ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದು, “ಇದು ಸತ್ಯಕ್ಕೆ ಸಂದ ಜಯ. ಜಯತೆ, ಜಯತೆ, ಸತ್ಯಮೇವ ಜಯತೆ. ಸಿದ್ದರಾಮಯ್ಯ ಅವರು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ” ಎಂದು ಬರೆದಿದೆ.
“ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ” ಎಂದು ಬಿಜೆಪಿ ಹೇಳಿದೆ.
“ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದೆ.
