Home ಸುದ್ದಿಗಳು ನ. 14ರಿಂದ ಉಡುಪಿ ಜಿಲ್ಲೆಯಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ

ನ. 14ರಿಂದ ಉಡುಪಿ ಜಿಲ್ಲೆಯಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ

0
ನ. 14ರಿಂದ ಉಡುಪಿ ಜಿಲ್ಲೆಯಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ

ಉಡುಪಿ: ಉಡುಪಿ ಜಿಲ್ಲಾ ಸಹಕಾರ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನವೆಂಬರ್ 14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳು ನಡೆಯಲಿದೆ.

ಈ ಕಾರ್ಯಕ್ರಮದ ಕುರಿತು ಮಾತನಾಡಿದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಯಾವ ದಿನ ಏನೆಲ್ಲಾ ಕಾರ್ಯಕ್ರಮ: ಈ ಬಾರಿಯ ಸಹಕಾರಿ ಸಪ್ತಾಹದ ಧ್ಯೇಯ ವಾಕ್ಯ “ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ಆಗಿದ್ದು, ಮೊದಲನೇ ದಿನ ನ.14ರಂದು ಬೆಳಿಗ್ಗೆ 10.30ಕ್ಕೆ ಮಂದಾರ್ತಿ ಶ್ರೀ ದುರ್ಗಾ ಸಹಕಾರ ಸೌಧದ ಚಾಮುಂಡೇಶ್ವರಿ ಸಭಾಂಗಣದಲ್ಲಿ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ನಡೆಯಲಿದೆ ಹಾಗೂ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಪ್ತಾಹಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಅದೇ ದಿನ ಬೆಳಿಗ್ಗೆ 9ಗಂಟೆಗೆ ಸಹಕಾರ ಪ್ರಚಾರ ರಥಕ್ಕೆ ಚಾಲನೆ ನೀಡಲಾಗುವುದು.

ಎರಡನೇ ದಿನ ನ.15ರಂದು ಬೆಳಿಗ್ಗೆ 10.30ಕ್ಕೆ ಕಾರ್ಕಳ ಜೋಡುರಸ್ತೆಯ ರಾಜಾಪುರ ಸಭಾಭವನದಲ್ಲಿ “ಸಹಕಾರ ಸಂಸ್ಥೆಗಳಲ್ಲಿ ಅನ್ವೇಷನೆ, ತಾಂತ್ರಿಕತೆ ಮತ್ತು ಉತ್ತಮ ಆಡಳಿತ” ವಿಷಯದ ಕುರಿತು ಎರಡನೇ ದಿನದ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದ.ಕ ಜಿಲ್ಲಾ‌ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ‌.

ಮೂರನೇ ದಿನ ನ. 16ರಂದು ಬೆಳಿಗ್ಗೆ 9ಗಂಟೆಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ “ಉದ್ಯಮ ಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ವಿಷಯದ ಕುರಿತ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದ್ದು, ಸಹಕಾರ ಸಚಿವ ಕೆ.ಎನ್ ರಾಜಣ್ಣ ಉದ್ಘಾಟಿಸಲಿದ್ದಾರೆ.

ನಾಲ್ಕನೇ ದಿನ ನ. 17ರಂದು ಬೆಳಿಗ್ಗೆ 10.30ಕ್ಕೆ ಬೈಂದೂರಿನ ನಾಗೂರು ಕೃಷ್ಣಲಲಿತ ಕಲಾ ಮಂದಿರದಲ್ಲಿ “ಸಹಕಾರಿ ಉದ್ಯಮಗಳಲ್ಲಿ ಪರಿವರ್ತನೆ” ವಿಷಯದ ಕುರಿತ ಕಾರ್ಯಕ್ರಮ ಜರುಗಲಿದ್ದು, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣೆ ನಡೆಯಲಿದೆ.

ಐದನೇ ದಿನ ನ. 18ರಂದು ಬೆಳಿಗ್ಗೆ 10ಗಂಟೆಗೆ ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಸಹಕಾರ ಸೌರಭ ಸಭಾಂಗಣದಲ್ಲಿ “ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವುದು” ವಿಷಯ ಕುರಿತ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಉದ್ಘಾಟಿಸಲಿದ್ದಾರೆ.

ಆರನೇ ದಿನ ನ. 19ರಂದು ಬೆಳಿಗ್ಗೆ 10.30ಕ್ಕೆ ಬೆಳ್ವೆ ವಾಸುಕಿ ಸಭಾಭವನದಲ್ಲಿ “ಮಹಿಳೆಯರು, ಯುವಕರು ಮತ್ತು ಅಬಲವರ್ಗಗಳಿಗಾಗಿ ಸಹಕಾರ ಸಂಸ್ಥೆಗಳು” ವಿಷಯದ ಕುರಿತ ಕಾರ್ಯಕ್ರಮ ನಡೆಯಲಿದೆ.

ಏಳನೇ ದಿನ ನ.20ರಂದು ಬೆಳಿಗ್ಗೆ 10ಗಂಟೆಗೆ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ’ ವಿಷಯದ ಕುರಿತ ಕಾರ್ಯಕ್ರಮ ಹಾಗೂ ಸಪ್ತಾಹದ ಸಮಾರೋಪ ಸಮಾರಂಭ ಜರುಗಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದ.ಕ ಜಿಲ್ಲಾ‌ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ‌ ಎಂದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ವಿವಿಧ ಸಹಕಾರಿ ಸಂಸ್ಥೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಅಲೆವೂರು, ಕಟಪಾಡಿ ಶಂಕರ ಪೂಜಾರಿ, ಶ್ರೀಧರ್ ಪಿ.ಎಸ್., ಸಿಇಒ ಅನುಷಾ ಬಿ. ಕೋಟ್ಯಾನ್ ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here