ನವದೆಹಲಿ: 48 ವಿಧಾನಸಭಾ ಕ್ಷೇತ್ರಗಳು ಹಾಗೂ 2 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶದ ಹೊರಬಿದ್ದಿದೆ.
ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮೇಘಾಲಯ, ಪಂಜಾಬ್, ರಾಜಸ್ಥಾನ, ಸಿಕ್ಕಿಂ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ 48 ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ.
ಈ ಪೈಕಿ 23 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಗೆದ್ದರೆ, ಉಳಿದ ಸ್ಥಾನಗಳು ವಿಪಕ್ಷಗಳ ಪಾಲಾಗಿವೆ.
ರಾಜಸ್ಥಾನದಲ್ಲಿ 7 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 5ರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮತ್ತು ಭಾರತ್ ಆದಿವಾಸಿ ಪಕ್ಷ ತಲಾ ಒಂದೊಂದು ಸ್ಥಾನಗಳಲ್ಲಿ ಗೆಲುವು ಕಂಡಿದೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ವಿಯಜ ಪತಾಕೆ ಹಾರಿಸಿದೆ. 9ರ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ, ಒಂದು ಕ್ಷೇತ್ರದಲ್ಲಿ ಮಿತ್ರ ಪಕ್ಷ ಆರ್‌ಎಲ್‌ಡಿ ಹಾಗೂ 2 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ ಗೆಲುವು ಕಂಡಿದೆ.
ಛತ್ತೀಸ್‌ಘಡ, ಗುಜರಾತ್‌ನ ತಲಾ 1 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಾಯಿತು. ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಮಧ್ಯಪ್ರದೇಶದ 2 ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ತಲಾ ಒಂದೊಂದು ಸ್ಥಾನ ಪಡೆದುಕೊಂಡಿವೆ.
ಪಂಜಾಬ್‌ನ 4 ಕ್ಷೇತ್ರಗಳಲ್ಲಿ ಮೂರು ಎಎಪಿ, ಒಂದು ಕಾಂಗ್ರೆಸ್ ಪಾಲಾಗಿದೆ. ಉತ್ತರಾಖಂಡದ ಒಂದು ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿದೆ. ಮೇಘಾಲಯದಲ್ಲಿ ಗ್ಯಾಂಬೆಗ್ರೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಎನ್‌ಪಿಪಿ ಗೆಲುವು ಸಾಧಿಸಿದೆ.
ಬಂಗಾಳದಲ್ಲಿ 6 ಸ್ಥಾನಗಳನ್ನೂ ತೃಣಮೂಲ ಕಾಂಗ್ರೆಸ್ ಗೆದ್ದುಕೊಂಡಿದ್ದು, ಬಿಹಾರದ 4 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟಕ್ಕೆ ಭರ್ಜರಿ ಗೆಲುವು ಸಾಧಿಸಿದೆ. ಅಸ್ಸಾಂನ 5 ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಎನ್‌ಡಿಎ ಗೆದ್ದಿದೆ. ಇಲ್ಲಿ ಕಾಂಗ್ರೆಸ್ ಖಾತೆ ತೆರೆದಿಲ್ಲ.
