
ಉಡುಪಿ: ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆಯ ದಬ್ಬಾಳಿಕೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಹಿಂದೂ ಕಾರ್ಯಕರ್ತರು ಉಡುಪಿ ಎಸ್ಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಹಿಂದೂ ಸಂಘಟನೆಗಳು ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಎಸ್ಪಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ಬಿಜೆಪಿಯ ಐವರು ಶಾಸಕರು ಭಾಗಿಯಾಗಿದ್ದು ವಿಶೇಷವಾಗಿತ್ತು. ಆರಂಭದಲ್ಲಿ ಎಸ್ಪಿ ಕಚೇರಿಯೆದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಭಾರಿ ಭದ್ರತೆ ಮಾಡಲಾಯಿತು.
ಹೀಗಾಗಿ ಕೊನೆ ಕ್ಷಣದಲ್ಲಿ ಎಸ್ಪಿ ಕಚೇರಿ ಬದಲು ದೂರದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನ ಮೇರೆಗೆ ನೂರಾರು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ಮೊಕದ್ದಮೆ ದಾಖಲಿಸುತ್ತಿದೆ. ಆ ಮೂಲಕ ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ.
ಕಾಂಗ್ರೆಸ್ ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕಿ ಹಿಂದುತ್ವದ ವಿಚಾರಧಾರೆಗಳನ್ನು ತಡೆಯಬಹುದು ಎಂಬ ಭ್ರಮೆಯಲ್ಲಿದೆ. ಅದಕ್ಕಾಗಿ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ವಿನಾ ಕಾರಣ ಕೇಸ್ ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಶಾಸಕ ಯಶ್ನಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕೊಡ್ಲಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಹಿಂದೂ ಸಂಘಟನೆಗಳ ನಾಯಕರಾದ ಸುನಿಲ್ ಕೆಆರ್, ಸುನಿಲ್ ಮೆಂಡನ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
