
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ತೀವ್ರತೆ ಪಡೆದಿದ್ದು, ಇಂದು ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ.
ತಮಿಳುನಾಡು ಹಾಗೂ ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಈಗಾಗಲೇ ತಮಿಳುನಾಡಿನಲ್ಲಿ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಫೆಂಗಲ್ ಚಂಡಮಾರುತವು ಭಾರಿ ಮಳೆ ತರಲಿದ್ದು ಮತ್ತು ಗಂಟೆಗೆ 70 ರಿಂದ 90 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.
ಮಳೆ ಮುನ್ಸೂಚನೆ ಹೊಂದಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.
ರಾಜ್ಯ ಸರ್ಕಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಿದೆ. ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ನಿಯಮ ಜಾರಿಗೊಳಿಸುವಂತೆ ಸೂಚಿಸಿದೆ.
ಮುನ್ನೆಚ್ಚರಿಕಾ ಕ್ರಮದ ಭಾಗವಾಗಿ ರಾಜ್ಯಾದ್ಯಂತ 2,229 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಆಶ್ರಯ ಅಗತ್ಯವಿರುವವರಿಗೆ ಸಂಪನ್ಮೂಲಗಳನ್ನು ಸಂಗ್ರಹಿಸಲಾಗಿದೆ.
