
ಬೆಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡುಮಾರುತದ ಪರಿಣಾಮ ಸೋಮವಾರ ತಡರಾತ್ರಿಯಿಂದ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ದಾವಣಗೆರೆ, ಕೋಲಾರ ಹಾಗೂ ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡುಮಾರುತದ ಪರಿಣಾಮ ಸಿಲಿಕಾನ್ ಸಿಟಿ ಬೆಂಗಳೂರಿನ ಅನೇಕ ಕಡೆ ಮಳೆಯಾಗಿತ್ತು. ಜೋರು ಮಳೆಯಾದ ಪರಿಣಾಮ ರಸ್ತೆಗಳು ಕೆರೆಯಂತಾಗಿದೆ.
ಇಂದು ಸಹ ರಾಜ್ಯದ ಅನೇಕ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಫೆಂಗಲ್ ಪರಿಣಾಮ ಹೆಚ್ಚಾಗಿ ಕಾಡುವ ಸಾಧ್ಯತೆ ಇರುವುದರಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕುಮಾರಧಾರ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ.
ಇವತ್ತು ಮಂಗಳೂರಿನ ಪುರವನದಲ್ಲಿ ನಡೆಯಬೇಕಿದ್ದ ಬಹುಸಂಸ್ಕೃತಿ ಉತ್ಸವವನ್ನು ಮುಂದೂಡಲಾಗಿದೆ. ಹೀಗಾಗಿ, ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಮತ್ತು ಸಚಿವ ಶಿವರಾಜ್ ತಂಗಡಗಿ ಪ್ರವಾಸ ರದ್ದಾಗಿದೆ.
