
ಮಣಿಪಾಲ: ಮಾದಕ ವಸ್ತುಗಳ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ಎನ್‌ಸಿಒಆರ್‌ಡಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಡಂಚಿನ ಪ್ರದೇಶದಲ್ಲಿ ಹಾಗೂ ಕೆಲವು ತೋಟಗಳಲ್ಲಿ ಗಾಂಜಾ ಬೆಳೆಯುವ ಸಾಧ್ಯತೆ ಬಗ್ಗೆ ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬಂದಿ ನಿರಂತರ ವೀಕ್ಷಣೆ ನಡೆಸುತ್ತಿರಬೇಕು ಎಂದು ಸೂಚನೆ ನೀಡಿದರು.
ಕರಾವಳಿ ಪೊಲೀಸರು ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆ ಬಗ್ಗೆ ನಿಗಾ ವಹಿಸಬೇಕು. ಜಿಲ್ಲೆಯಲ್ಲಿ 97ಕ್ಕೂ ಹೆಚ್ಚು ಮಾದಕ ಸೇವನೆಗಳ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಕೇರ್‌ಟೆಕರ್ಗಳನ್ನು ಹೆಚ್ಚು ನಿಯೋಜಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಅಂಗಡಿ, ಹೊಟೇಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಉದ್ದಿಮೆ ಪರವಾನಿಗೆ ರದ್ದು ಪಡಿಸಬೇಕು.
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ದೂರು ನೀಡಲು ಸರಕಾರ Stop Tobacco ಆ್ಯಪ್ ಅಭಿವೃದ್ಧಿಪಡಿಸಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡಬೇಕು ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದರು.
