
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.
ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ.
ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಭಾರೀ ಮಳೆಯು ರಾಜ್ಯದ ಹಲವಾರು ಭಾಗಗಳಲ್ಲಿ ಸಾಮಾನ್ಯ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ, ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಮತ್ತು ಸಾಧ್ಯವಾದಾಗಲೆಲ್ಲಾ ಮನೆಯೊಳಗೆ ಇರುವಂತೆ ತಿಳಿಸಿದ್ದಾರೆ.
ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ ಮತ್ತು ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಡಿ.13 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಎಲ್ಲೆಡೆ ಮೋಡಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ವರದಿ ಮಾಡಿದೆ.
