
ಕುಂದಾಪುರ: ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಇನ್ನೊಂದು ಕಾರಿನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಪರಾರಿಯಾಗಿರು ಘಟನೆ ರವಿವಾರ ಸಂಜೆ ಸಮಯ ಕುಂದಾಪುರ ಚಿಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ನಡೆದಿದೆ.
ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಖಾರ್ವಿಕೇರಿನಿವಾಸಿ ರಾಘವೇಂದ್ರ ಶೇರುಗಾರ್ ಎಂದು ಗುರುತಿಸಲಾಗಿದೆ. ಚೂರಿ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಘವೇಂದ್ರ ಅವರು ತನ್ನ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಇನ್ನೊಂದು ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಯೋರ್ವ ರಾಘವೇಂದ್ರ ಅವರ ಕಾರನ್ನು ಅಡ್ಡಗಟ್ಟಿ ಅವರ ತೊಡೆಗೆ ಚೂರಿ ಇರಿದು ಕಾರಿನಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಕುಂದಾಪುರ ನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
