ಮಂಗಳೂರು: ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸಕ್ಕಿದ್ದ ಹತ್ಯೆಗೊಳಗಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಪತ್ನಿ ನೂತನ ಕುಮಾರಿ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಕಳೆದ ಜುಲೈ 26 ಪ್ರವೀಣ್ ನೆಟ್ಟಾರು ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆಗೈದಿದ್ದರು. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬೊಮ್ಮಾಯಿ ಸರ್ಕಾರ ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಿತ್ತು. ಅಲ್ಲದೆ ಪ್ರವೀಣ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಿಸಬೇಕೆಂಬ ಕೂಗು ಕೇಳಿ ಬಂದಿದ್ದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದು, ಅದರಂತೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ ನೀಡಲಾಗಿತ್ತು.
ಆದರೆ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿ ಅಧಿಕಾರಕ್ಕೆ ಬರುತ್ತಿದ್ದಂತೆ ಹಲವು ಬದಲಾವಣೆ ಆಗಿದ್ದು, ನೂತನ ಕುಮಾರಿ ಅವರ ಕೆಲಸಕ್ಕೂ ಕತ್ತು ಬಂದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಹೊಸ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನ ಅವರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಯಾವುದೇ ಸರ್ಕಾರ ಬದಲಾದಾಗ ಹಿಂದಿನ ತಾತ್ಕಾಲಿಕ ನೇಮಕಾತಿಗಳು ರದ್ದುಗೊಳ್ಳುವುದು ಸಹಜ. ತಮ್ಮನ್ನು ಕೆಲಸದಲ್ಲಿ ಮುಂದುವರೆಸುವಂತೆ ಕೋರಿ ಪತ್ರ ಬರೆದರೆ, ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
