ಬೆಂಗಳೂರು: ಸುಮಲತಾ ಅಂಬರೀಶ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ಸುಮಲತಾ ಬಿಜೆಪಿ ಸೇರ್ಪಡೆಗೂ ಮುನ್ನ ಮಾತನಾಡಿ, “ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ” ಎಂದು ಸಾಮಾಜಿಕ ಜಾಲತಾಣದ ಮೂಲಕ ಕೇಳಿಕೊಂಡಿದ್ದಾರೆ.
ಪಕ್ಷ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ನನಗೆ ಪ್ರೇರಣಾದಾಯಕವಾಗಿದೆ. ಪ್ರಧಾನಿ ಮೋದಿಯವರು ನುಡಿದಂತೆ ನಡೆಯುತ್ತಿದ್ದಾರೆ. ಅವರ ವಿಕಸಿತ ಭಾರತ ಕನಸು ನನಸಾಗಬೇಕು. ಅದಕ್ಕೆ ನಾನು ಬೆಂಬಲಿಸುವೆ. ಮುಖ್ಯವಾಗಿ ನನ್ನ ಮಂಡ್ಯ ಜಿಲ್ಲೆ ಅಭಿವೃದ್ಧಿಯಾಗಬೇಕು ಎಂದರು.
ಈ ವೇಳೆ ಸುಮಲತಾ ಜೊತೆಗೆ ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
