
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ರಾತ್ರಿ ಸುರಿದ ಭಾರೀ ಮಳೆಗೆ ಬೈಲಕೆರೆಯ ಅದಮಾರು ಮಠದ ಬಳಿಯ ನಾಲ್ಕು ಮನೆಯೊಳಗೆ ನೀರು ನುಗ್ಗಿದ ಪರಿಣಾಮ ಮನೆಯವರನ್ನು ಸಮೀಪದ ಖಾಸಗಿ ಹೋಟೆಲ್ ಗೆ ಸ್ಥಳಾಂತರ ಮಾಡಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳೀಯರನ್ನು ರಕ್ಷಿಸಿದ್ದು, ನೀರು ನುಗ್ಗಿದ ನಾಲ್ಕು ಮನೆಯಲ್ಲಿದ್ದ ಒಟ್ಟು 14 ಜನರನ್ನು ರಕ್ಷಣೆ ಮಾಡಿದ್ದಾರೆ.
ಇನ್ನು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೂಡ ವಿಪರೀತ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.
