ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ್ದು, ಎಲ್ಲ ಕಾಮಗಾರಿಯನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಹಾಗೂ ರಸ್ತೆ ಕಾಮಗಾರಿ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾ.ಹೆ. ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ, ಮಲ್ಪೆ-ಕರಾವಳಿ ಬೈಪಾಸ್. ರಾ.ಹೆ ೧೬೯ ಕಾಮಗಾರಿ, ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿಗಳು ಕುಂಟುತ್ತಾ ಸಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಜನರು ಸಮಸ್ಯೆ ಪರಿಹಾರಕ್ಕಾಗಿ ಜಿಲ್ಲಾಡಳಿತದತ್ತ ಮುಖ ಮಾಡುತ್ತಾರೆ. ಆದರೆ ಅಭಿಯಂತರರು ಮತ್ತು ಗುತ್ತಿಗೆದಾರರು ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕಾಮಗಾರಿಯ ಪ್ರಗತಿಯ ವೇಗವನ್ನು ಹೆಚ್ಚಿಸಿ ಪೂರ್ಣಗೊಳಿಸದಿದ್ದಲ್ಲಿ ಕಾನೂನು ರೀತಿಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.
ರಾ.ಹೆದ್ದಾರಿಗಳ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲ ಕಾರ್ಯಗಳನ್ನು ಶೀಘ್ರಾತಿಶೀಘ್ರವಾಗಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಎಸ್‌ಪಿ ಡಾ| ಅರುಣ್ ಕೆ., ಎಸಿ ಮಹೇಶ್ಚಂದ್ರ, ರಾ.ಹೆ.ಪ್ರಾಧಿ ಕಾರದ ಯೋಜನಾ ನಿರ್ದೇಶಕ ಅಬ್ದುಲ್ಲ ಮೊಹಮ್ಮದ್ ಅಜ್ಮಿ ಸಹಿತ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
