
ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾ. 2ರಂದು ಉಡುಪಿಗೆ ಭೇಟಿ ನೀಡಲಿದ್ದು, ಅಂದು ಸಂಜೆ 4 ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸುವರು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದರು.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಿಗ್ಗೆ ಕಾಪುವಿನ ಹೊಸ ಮಾರಿಗುಡಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ 12.30 ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ನಂತರ 2.30 ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ವಾಹನ ಜಾಥಾದ ಮೂಲಕ ಕಾರ್ಕಳಕ್ಕೆ ತೆರಳುವರು ಎಂದು ತಿಳಿಸಿದರು.
ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 209 ಬೂತ್ ಗಳ, 34 ಗ್ರಾಮೀಣ ಕಾಂಗ್ರೆಸ್ ಹಾಗೂ 2 ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇದೇ ವೇದಿಕೆಯಲ್ಲಿ ನಡೆಯಲಿದೆ ಎಂದರು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪಕ್ಷದ ಶಾಸಕತ್ವವನ್ನು ಪಡೆದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.
