ರಾಜ್ಯ ಉಪ ಲೋಕಾಯುಕ್ತ ದಿಢೀರ್ ಭೇಟಿ
ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಶನಿವಾರದಂದು ಉಡುಪಿ, ಬ್ರಹ್ಮಾವರ, ಕಾಪು ಭಾಗದ ಕೆಲವು ಕಡೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾ.ಪಂ. ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಅಲ್ಲಿನ ಅವ್ಯವಸ್ಥೆಗೆ ಅಸಮಾಧಾನ ವ್ಯಕ್ತಪಡಿಸಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದರು.
ಆದಿಉಡುಪಿ ಎಪಿಎಂಸಿಗೆ ಭೇಟಿ ನೀಡಿ, ಶೌಚಾಲಯ ಮತ್ತು ಕುಡಿಯುವ ನೀರಿನ ಅವ್ಯವಸ್ಥೆ ಕಂಡು ಖೇದ ವ್ಯಕ್ತಪಡಿಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸುವಂತೆ ನಿರ್ದೇಶಿಸಿದರು.
ಕಾಪು ಡಂಪಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಲ್ಲಿನ ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
