ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲುವನ್ನು ಸಾಧಿಸಿದ್ದಾರೆ. ಇದೀಗ ಸುಧಾಕರ್ ಗೆ ಸವಾಲು ಹಾಕಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಪ್ರದೀಪ್ ಈಶ್ವರ್ ಅವರದ್ದು ಎನ್ನಲಾದ ರಾಜೀನಾಮೆ ಪತ್ರವೊಂದು ವೈರಲ್ ಆಗಿದ್ದು, ಅದು ನಕಲಿ ಪತ್ರ ಎಂದು ಶಾಸಕರ ಆಪ್ತ ಮೂಲಗಳು ಸ್ಪಷ್ಟಪಡಿಸಿವೆ ಎನ್ನಲಾಗಿದೆ.
ಹೌದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸುದ್ದಿಗೋಷ್ಠಿಯೊಂದರಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗಿಂತ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಒಂದು ಮತ ಹೆಚ್ಚಿಗೆ ಪಡೆದರೂ ಕೂಡ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುವ ಹೇಳಿಕೆ ನೀಡಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಅವರದ್ದೇ ಎನ್ನಲಾದ ರಾಜೀನಾಮೆ ಪತ್ರವೊಂದು ಎಲ್ಲೆಡೆ ಹರಿದಾಡುತ್ತಿದೆ. ಆದರೆ ಇದು ನಕಲಿ ಪತ್ರ ಎಂದು ಶಾಸಕರ ಆಪ್ತ ಮೂಲಗಳು ಸ್ಪೀಕರ್‌ಗೆ ಸ್ಪಷ್ಟಪಡಿಸಿವೆ.
