
ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಬಹಳ ಜೋರಾಗಿ ಅರ್ಭಟಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೇ ಮಳೆಯಾಗುತ್ತಿದೆ. ಅಲ್ಲಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾದರೆ, ಇನ್ನೊಂದೆಡೆ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ. ಇಂದು ಕೂಡ ದಕ್ಷಿಣ ಕನ್ನಡ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರಿಗೆ ಮೀನುಗಾರಿಕೆಗೆ ಇಳಿಯದಂತೆ ಸೂಚಿಸಲಾಗಿದೆ. ಅಲ್ಲದೇ ಸಮುದ್ರ, ನದಿ ತೀರದಲ್ಲಿ ವಾಸಿಸುತ್ತಿರುವವರಿಗೆ ಬಹಳ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಇನ್ನು, ಹವಾಮಾನ ಇಲಾಖೆಯ ಸೂಚನೆಯ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
