
ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಕಳೆದ ಎರಡು ದಿನ ಸ್ವಲ್ಪ ತಗ್ಗಿದ್ದ ಮಳೆ ಇದೀಗ ಮತ್ತೆ ತನ್ನ ಆರ್ಭಟ ಮುಂದುವರಿಸಿದೆ. ಧಾರಾಕಾರ ಮಳೆಯಿಂದ ಈ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ೨೪ಗಂಟೆಗಳ ಅವಧಿಯಲ್ಲಿ ಕರಾವಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಯಲ್ಲಿ ಇದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು, ಉತ್ತರಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಪ್ರವಾಸಿಗರಿಗೂ ಕೂಡ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಉಳಿದಂತೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿಯೂ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಾವಣಗೆರೆ, ಮೈಸೂರು ಹಾಸನ ಸೇರಿದಂತೆ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
