
ಕಾಪು: ತಿಂಗಳ ಹಿಂದೆ ನಡೆದಿದ್ದ ಪ್ರಕರಣವೊಂದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗುಂಬೆ ಜಲಪಾತಕ್ಕೆ ತೆರಳಿದ್ದ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾರ್ಥಿಗಳಿಬ್ಬರನ್ನು ವಾಪಸ್ ಬರುತ್ತಿದ್ದ ವೇಳೆ ವಿದ್ಯಾಥಿಗಳ ಬೈಕ್ ಅಡ್ಡಹಾಕಿದ ಸ್ಥಳೀಯ ಸಂಘಪರಿವಾರದ ಕಾರ್ಯಕರ್ತರು ಅನೈತಿಕ ಪೊಲೀಸ್‌ಗಿರಿ ನಡೆಸಿದ್ದರು. ಈ ವೇಳೆ ಕಾರ್ಯಕರ್ತರು ವಿದ್ಯಾರ್ಥಿ ವಿದ್ಯಾರ್ಥಿನಿಯರ ವಿಡಿಯೋವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದರು. ಆದರೆ ಪ್ರಕರಣ ನಡೆದ ತಿಂಗಳ ಬಳಿಕ ಸೊಶೀಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಹಿನ್ನೆಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸಹೋದರ ಕಾಪು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಯುವತಿಯ ಸಹೋದರ ನೀಡಿದ ದೂರಿನ ಮೇರೆಗೆ ಕಲಂ 143, 147, 341, 505(2), 354 D r/w 149 IPC ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
