
ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿದೆ. ಅಲ್ಲದೇ ಇತ್ತೀಚೆಗೆ ತರಕಾರಿ, ಹಣ್ಣುಗಳ ದರವನ್ನು ಕೂಡ ಏರಿಕೆ ಮಾಡಲಾಗಿತ್ತು. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನತೆಗೆ ಇದೀಗ ಮತ್ತೊಮ್ಮೆ ಬೆಲೆ ಏರಿಕೆ ಶಾಕ್ ಎದುರಾಗಿದೆ. ನಂದಿನಿ ಹಾಲು, ಮೊಸರಿನ ದರವನ್ನು ಶೀಘ್ರವೇ ಹೆಚ್ಚಳ ಮಾಡಲು ಚಿಂತನೆ ನಡೆಸಿರುವುದಾಗಿ ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ನಂದಿನಿ ಉತ್ಪನ್ನಗಳ ದರ ಹೆಚ್ಚಳ ಮಾಡುವಂತೆ ವಿವಿಧ ಹಾಲು ಒಕ್ಕೂಟಗಳು ಮನವಿ ಮಾಡಿದ್ದಾರೆ. ಬೆಲೆ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ನಿಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
