
ಉಡುಪಿ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಭೆ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದ್ದು ಈ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅನಧಿಕೃತ ಹಾಗೂ ಅವಧಿ ಮೀರಿದ 85 ಕ್ಕೂ ಅಧಿಕ ಬ್ಯಾನರ್‌ಗಳನ್ನು ತೆರವುಗೊಳಿಸಲಾಯಿತು.
ಪೊಲೀಸ್ ರಕ್ಷಣೆಯಲ್ಲಿ ನಗರಸಭೆಯ ಅಧಿಕಾರಿಗಳು, ಉಡುಪಿ ನಗರ, ಸಂತೆಕಟ್ಟೆ, ಮಣಿಪಾಲ ಹಾಗೂ ನಗರ ಸಭೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಹಾಗೂ ಅವಧಿ ಮೀರಿದ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಗಲಭೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕಾರ್ಯಚರಣೆ ಕೈಗೊಂಡಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸುತ್ತಿದ್ದಾರೆ.
ಇನ್ನು, ಶಿವಮೊಗ್ಗ ಗಲಭೆ ಬಳಿಕ ಮಂಗಳೂರಿನ ಉಳ್ಳಾಲದಲ್ಲಿಯೂ ಕೂಡ ಈದ್ ಮಿಲಾದ್ ವೇಳೆ ಕೆಲವರು ಪುಂಡಾಟ ಮೆರೆದಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಅವರಿಗೆ ನೊಟೀಸ್ ಜಾರಿ ಮಾಡಿದ್ದರು. ಅದರಂತೆ ಉಡುಪಿಯಲ್ಲಿ ಇಂತಹ ಘಟನೆಗಳು ಮರುಕಳಿಸಬಾರದೆನ್ನುವ ಉದ್ದೇಶದಿಂದ ಪೊಲೀಸರು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ.
