
ಮಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿದೆ. ಅಲ್ಲಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರ ಮುಖದಲ್ಲಿ ಸಂತಸ ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಆರೆಂಜ್ ಅಲರ್ಟ್ ಘೊಷಣೆ ಮಾಡಲಾಗಿದೆ. ಈ ಹಿನ್ನೆಲೆ ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ತಿಳಿಸಿದ್ದಾರೆ. ಇನ್ನು, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಸಂಭವವಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
