
ಉಡುಪಿ: ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ದೀಪಗಳ ಹಬ್ಬವನ್ನು ಪಟಾಕಿ ಸಿಡಿಸಿ, ದೀಪ ಬೆಳಗಿ ಆಚರಿಸಲು ಜನರು ಹಾತೊರೆಯುತ್ತಿದ್ದಾರೆ. ಆದರೆ ಈ ದೀಪಾವಳಿಯಲ್ಲಿ ಪಟಾಕಿಯಿಂದ ಆಗುವ ಅನಾಹುತಗಳನ್ನು ತಪ್ಪಿಸಲು ಸಾಕಷ್ಟು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗುತ್ತಿದೆ. ಈ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಹಸಿರು ಪಟಾಕಿ ಬಳಸಿ ದೀಪಾವಳಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚಿಸಿದ್ದಾರೆ.
*
ಈ ಬಗ್ಗೆ ಮಾಹಿತಿ ನೀಡಿರುವ ಅವರು, ನವೆಂಬರ್ 12ರಿಂದ 15ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಈ ಬಾರಿ ಮಾರುಕಟ್ಟೆಯಲ್ಲಿ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶವಿದೆ. ಪಟಾಕಿಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿದ್ದು, ಕ್ಯೂ ಆರ್ ಕೋಡ್ ಇರುವ ಪಟಾಕಿಗಳನ್ನೇ ಉಪಯೋಗಿಸಬೇಕು. ರಾತ್ರಿ 8 ಗಂಟೆಯಿಂದ 11ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಇನ್ನು, ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಿಡಿಮದ್ದುಗಳನ್ನು ಸ್ಫೋಟಿಸುವಂತಿಲ್ಲ ಎಂದು ಸೂಚಿಸಿದ್ದು, ತಹಶೀಲ್ದಾರರು, ವೃತ್ತ ನಿರೀಕ್ಷಕರು, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು. ಅಲ್ಲಿ ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಇದ್ದಲ್ಲಿ ಇಡೀ ಗೋದಾಮುಗಳನ್ನು ಮುಟ್ಟುಗೋಲು ಹಾಕುವಂತೆ ತಿಳಿಸಿದ್ದಾರೆ.6
