
ಬೆಂಗಳೂರು: ಪರವಾನಗಿ ನವೀಕರಿಸದ ಆರೋಪ ಹೊತ್ತ ಹಿನ್ನೆಲೆ ಖಾಸಗಿ ಸುದ್ದಿ ವಾಹಿನಿಯಾದ ಪವರ್ ಟಿವಿ ತನ್ನೆಲ್ಲಾ ಪ್ರಸಾರವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಜೆಡಿಎಸ್ನ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ.ರಮೇಶ್ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇ ಗೌಡ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ ಪವರ್ ಟಿವಿಯನ್ನು ರಾಕೇಶ್ ಶೆಟ್ಟಿಯವರು ಕಾನೂನು ಬಾಹಿರವಾಗಿ ನಡೆಸುವುದರ ಜೊತೆಗೆ ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. 2021ರಿಂದ ಈ ಚಾನೆಲ್ನ ಪರವಾನಗಿ ನವೀಕರಿಸಿಲ್ಲ ಎನ್ನುವುದನ್ನು ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆ ವಾದವನ್ನು ಆಲಿಸಿದ ನ್ಯಾಯಪೀಠ ಕೇಬಲ್ ಟೆಲಿವಿಷನ್ ನೆಟ್ವರ್ಕ್ ಗಳ ಕಾಯ್ದೆ – 1955ರ ಆದೇಶವನ್ನು ಉಲ್ಲಂಘಿಸಿರುವ ಕಾರಣಕ್ಕೆ ತಕ್ಷಣದಿಂದಲೇ ತಮ್ಮ ಚಾನೆಲ್ ಸುದ್ದಿ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿದೆ ಎನ್ನಲಾಗಿದೆ.
