ನವದೆಹಲಿ: ನಿನ್ನೆ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲಗೊಂಡಿತ್ತು. ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 17ನೇ ಲೋಕಸಭೆಯನ್ನು ವಿಸರ್ಜಿಲು ಶಿಫಾರಸ್ಸು ಮಾಡಲಾಯಿತು. ಆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಈ ಬಾರಿ ಬಿಜೆಪಿ ಬಹುಮತ ಪಡೆಯಲು ವಿಫಲವಾದ ಹಿನ್ನೆಲೆ ಟಿಡಿಪಿ ಮುಖ್ಯಸ್ಥ ಚಂದ್ರ ಬಾಬು ನಾಯ್ಡು ಹಾಗೂ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮೋದಿಯವರಿಗೆ ಅಧಿಕೃತವಾಗಿ ಬೆಂಬಲ ಘೋಷಿಸಿರುವ ಹಿನ್ನೆಲೆ ನರೇಂದ್ರ ಮೋದಿಯವರು ಸತತ ಮೂರನೇ ಬಾರಿ ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ. ಇದೇ ಜೂನ್ 8 ರಂದು ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇನ್ನು, ಲೋಕಸಭಾ ಚುನಾವಣೆಯ ಫಲಿತಾಂಶದ ಪ್ರಕಾರ, ಭಾರತದ ಚುನಾವಣಾ ಆಯೋಗವು 542 ಕ್ಷೇತ್ರಗಳಿಗೆ ಫಲಿತಾಂಶವನ್ನು ಪ್ರಕಟಿಸಿದ್ದು, ಬಿಜೆಪಿ 240 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. ಜೂನ್ 8ಕ್ಕೆ ಮೋದಿ ಪ್ರಮಾಣವಚನ ಸಲ್ಲಿಸಲ್ಲಿದ್ದು, ಈ ನಡುವೆ ಎನ್ಡಿಎ ನಾಯಕರು ಇಂದು ಸಂಜೆ ಪ್ರಧಾನಿ ಮೋದಿಯವರ ನಿವಾಸದಲ್ಲಿ ಸಭೆ ಸೇರಲಿದ್ದಾರೆ.
