ನವದೆಹಲಿ: ಒಡಿಶಾದ ಬಾಲಸೋರ್ ನಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್ ಮತ್ತು ವ್ಯಾನ್ ಮುಖಾಅಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮೇದಿನಿಪುರ ಬಳಿ ನಡೆದಿದೆ. ಈ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಭೀಕರ ರೈಲು ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಂಗಾಳದ ವಿವಿಧ ಜಿಲ್ಲೆಗಳ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬಸ್ಸಿನಲ್ಲಿದ್ದ ಅನೇಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಹಿನ್ನೆಲೆ: ಶುಕ್ರವಾರ ಸಂಭವಿಸಿದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ 288ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, 900ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
