ಬೆಂಗಳೂರು: ಈ ಬಾರಿ ಮುಂಗಾರು ಮಳೆ ಕೊಂಚ ತಡವಾಗಿ ಎಂಟ್ರಿ ಕೊಟ್ಟಿದೆ. ಕರಾವಳಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದೆ. ಆದರೆ ಬಿಸಿಲಿನ ಬೇಗೆಯಿಂದ ನೀರೆಲ್ಲಾ ಬತ್ತಿ ಹೋಗಿ ನೀರಿಗೆ ಹಾಹಾಕಾರ ಉಂಟಾಗಿದೆ. ಹಲವೆಡೆ ನೀರು ಬತ್ತಿ ಹೋಗಿ ನೀರಿಲ್ಲದೇ ಜನರು ಪರದಾಡುತ್ತಿದ್ದಾರೆ. ಇನ್ನೂ ಕೆಲವು ಕಡೆ ಶಾಲೆಗಳಿಗೆ ರಜೆ ನೀಡಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳ ಜೊತೆ ಮಹತ್ವದ ಸಭೆಯನ್ನು ಏರ್ಪಡಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲಜೀವನ್ ಮಿಷನ್ ಕಾಯಕ್ರಮದ ಅನುಷ್ಠಾನ ಕುರಿತು ಗೃಹ ಕಚೇರಿ ಕೃಷ್ಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಈ ವೇಳೆ ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
