
ಬೆಂಗಳೂರು: ಹಿಜಾಬ್ ನಿಷೇಧ ಆಗಿಯೇ ಇಲ್ಲ. ಇನ್ನು ಅದನ್ನು ವಾಪಸ್ ಪಡೆಯುವ ಪ್ರಶ್ನೆ ಎಲ್ಲಿ ಬಂತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಬೇರೆಡೆ ಎಲ್ಲಿ ಬೇಕು ಅಲ್ಲಿ ಹಾಕಿಕೊಳ್ಳಲು ಅವಕಾಶ ಇದೆ. ಇದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಿ ಜನರ ದಾರಿ ತಪ್ಪಿಸಲು, ರಾಜಕೀಯ ಲಾಭಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
1984 ರಲ್ಲಿ ಸಮಗ್ರ ಶಿಕ್ಷಣ ಕಾಯ್ದೆ ಅನ್ವಯ ಶಾಲಾ ಸಮವಸ್ತ್ರ ಜಾರಿಗೆ ತರಲಾಗಿತ್ತು, ಅದನ್ನು ನಮ್ಮ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಮುಖ್ಯಮಂತ್ರಿಗಳು ಅದನ್ನು ಹಿಂದೆ ಪಡೆಯುವ ಮಾನಾಡಿದ್ದಾರೆ. ಹಿಜಾಬ್ ಪ್ರಕರಣ ಈಗಾಗಲೇ ಕೊರ್ಟ್ ನಲ್ಲಿ ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಹಿಜಾಬ್ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇರಾಕ್, ಇರಾನ್ ನಲ್ಲಿ ಮಹಿಳೆಯರು ಹಿಜಾಬ್ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಸುಪ್ರಿಂ ಕೋರ್ಟ್ ನಲ್ಲಿ ಪ್ರಕರಣ ಇದ್ದಾಗ ಮುಖ್ಯಮಂತ್ರಿಗಳು ಈ ಬಗ್ಗೆ ಹೇಳಿಕೆ ನೀಡುವ ಅಗತ್ಯ ಏನಿತ್ತು ಎಂದು ಕಿಡಿಕಾರಿದರು.
