
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಸ್ ನಿಲ್ದಾಣದ ಬಳಿ ಬೈಕ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಈ ಘಟನೆಯಲ್ಲಿ ಬೈಕ್ ಸವಾರ ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್ ವೃತ್ತಿಯ ಹರೀಶ್ ಕುಮಾರ್ (45) ಮೃತಪಟ್ಟಿದ್ದಾರೆ.
ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ರಭಸಕ್ಕೆ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಸ್ಥಳೀಯರು ಸೇರಿ ಗಾಯಾಳು ಸವಾರನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಗಾಯಾಳು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಟ್ಯಾಂಕರ್ ಚಾಲಕ ಉತ್ತರ ಕನ್ನಡ ಜಿಲ್ಲೆಯ ಗೆದಿಗೆಯಪ್ಪ ಕೋಟೆ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
